ಎಲ್ಲರ ಗಮನ ರಾಜಭವನದತ್ತ: ಏನಾಗಲಿದೆ ರಾಜ್ಯಪಾಲರ ನಿರ್ಧಾರ?
2024-08-03 10:38:00
ಬೆಂಗಳೂರು: ಮೈಸೂರಿನ ಮುಡಾ ನಿವೇಶನ ಅಕ್ರಮ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಖಾಸಗಿ ದೂರಿನ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ತೆಗೆದುಕೊಳ್ಳುವ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ.
ಮುಖ್ಯಮಂತ್ರಿಗೆ ನೀಡಿರುವ ನೋಟೀಸ್‌ನ್ನು ಹಿಂಪಡೆಯಬೇಕೆಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವನ್ನು ರಾಜ್ಯಪಾಲರು ಅಂಗೀಕರಿಸುತ್ತಾರೆಯೇ ಇಲ್ಲವೇ ತಿರಸ್ಕರಿಸುವರೆ? ಎಂಬುದರ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಗಳು ನಿಂತಿವೆ.
ಸಾಮಾನ್ಯವಾಗಿ ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನು ಒಪ್ಪುವ ಸಾಧ್ಯತೆಗಳು ತೀರಾ ಕಡಿಮೆ.
ತಮಗಿರುವ ವಿಶೇಷ ಅಧಿಕಾರವನ್ನು ಬಳಸಿಕೊಂಡು ಮುಖ್ಯಮಂತ್ರಿ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿರುವ ನಿದರ್ಶನಗಳು ಸಾಕಷ್ಟಿವೆ. ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಿಗೆ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದೆಂದು ಸಚಿವ ಸಂಪುಟ ಸಭೆ ಒಂದು ಸಾಲಿನ ನಿರ್ಣಯವನ್ನು ಕೈಗೊಂಡಿದ್ದರೂ ರಾಜ್ಯಪಾಲರು ಅನುಮತಿ ನೀಡಿರುವ ಉದಾಹರಣೆಗಳು ಮುಂದಿವೆ.
ಇದೀಗ ನವದೆಹಲಿ ಪ್ರವಾಸದಲ್ಲಿರುವ ರಾಜ್ಯಪಾಲರು ಸೋಮವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದ್ದು, ಅವರು ತೆಗೆದುಕೊಳ್ಳುವ ಮುಂದಿನ ನಿರ್ಧಾರ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ಈ ಕ್ಷಣದವರೆಗೂ ರಾಜ್ಯಪಾಲರು ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಬಹಿರಂಗ ಹೇಳಿಕೆಯನ್ನು ಕೊಡದೆ ಎಲ್ಲವನ್ನೂ ಕಾಪಾಡಿಕೊಂಡು ಬಂದಿದ್ದಾರೆ. ರಾಜ್ಯಸರ್ಕಾರ ಶೋಕಾಸ್ ನೋಟಿಸ್‌ಗೆ ನೀಡುವ ಉತ್ತರವನ್ನು ನೋಡಿಕೊಂಡು ಕಾನೂನು ತಜ್ಞರ ಅಭಿಪ್ರಾಯ ತೆಗೆದುಕೊಂಡೇ ಮುಂದಿನ ಹೆಜ್ಜೆ ಇಡಲಿದ್ದಾರೆ ಎಂದು ಗೊತ್ತಾಗಿದೆ.
ನ್ಯಾಯಾಲಯದ ತೀರ್ಪುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಕಾನೂನು ತಜ್ಞರ ಸಲಹೆ ಮೇರೆಗೆ ಅವರು ತಮ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರದ್ವಾಜ್ ಮಾದರಿ ಆಗುವರೇ?
ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಕೇಳಿಬಂದಿದ್ದಾಗ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ಸಂಪುಟದ ನಿರ್ಣಯವನ್ನೇ ಲೆಕ್ಕಿಸದೇ ವಿಚಾರಣೆಗೆ ಅನುಮತಿ ನೀಡಿದ್ದರು. 2004ರ ಸುಪ್ರೀಂಕೋರ್ಟ್ ತೀರ್ಪಿನ ಒಂದು ಅಂಶವನ್ನು ಕೋರ್ಟ್ ಮಾಡಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.
ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಬಂದಿದ್ದವು. ಈ ಆರೋಪಗಳ ಬಗ್ಗೆ ಕೋರ್ಟ್‌ಗೆ ಖಾಸಗಿ ದೂರು ಮುಂದಾಗಿದ್ದ ವಕೀಲ ಸಿರಾಜಿನ್ ಬಾಷಾ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ 2011ರಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
comments
Log in to write reviews