ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ!
2024-08-16 12:39:14
ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನದ ದಿನಾಂಕ ಪ್ರಕಟಿಸಲು ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ಸುದ್ದಿಗೋಷ್ಢಿ ಕರೆದಿದೆ.
ಇದರಿಂದ ಕರ್ನಾಟಕದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಕೇಂದ್ರ ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಲಿದೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಜ್ಜಾಗಿವೆ.
ಇನ್ನು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಕಾಂಗ್ರೆಸ್ ಪಕ್ಷದ ಇ.ತುಕಾರಾಂ ಅವರು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂಡೂರು ಉಪಚುನಾವಣೆಗೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.
ಆದ್ದರಿಂದ ಸಂಡೂರು ಉಪಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಲಿದೆ.
ಅದೇ ರೀತಿ ದಕ್ಷಿಣದ ರಾಮನಗರ ಜಿಲ್ಲೆಯ ಚನ್ನಪಟ್ಟಣ ಜೆಡಿಎಸ್ ಶಾಸಕರಾಗಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜೆಡಿಎಸ್ ಸಂಸದರಾಗಿ ಕೇಂದ್ರ ಸಚಿವರಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆ ಇಂದು ಮಧ್ಯಾಹ್ನ ಘೋಷಣೆಯಾಗಲಿದೆ.
ಹೀಗಾಗಿ ಮಧ್ಯಾಹ್ನದಿಂದಲೇ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಈ ಮೂರೂ ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಂಭವನೀಯ ಅಭ್ಯರ್ಥಿಗಳು ಬಿ.ಫಾರಂ ಪಡೆಯಲು ಪೈಪೋಟಿ ಆರಂಭಿಸಲಿದ್ದಾರೆ.
comments
Log in to write reviews