ಬಿಜೆಪಿ ಶಾಸಕ ಯತ್ನಾಳ್ ವಿರುದ್ಧದ ವಿಚಾರಣೆ ರದ್ದುಪಡಿಸಿದ ಹೈಕೋರ್ಟ್
2024-08-26 05:49:46
ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಎಲ್ಲ ಹಿಂದುಗಳು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುತ್ತಾರೆಂದು ಹೇಳಿಕೆ ನೀಡಿ ಸರ್ಕಾರದ ಆದೇಶ ಉಲ್ಲಂಘಿಸಿದ ಆರೋಪ ಸಂಬಂಧ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧದ ಗದಗ ಜಿಲ್ಲೆಯ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಖಾಸಗಿ ದೂರು ಮತ್ತು ವಿಚಾರಣಾ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಚುನಾವಣಾ ಸಂಚಾರ ವಿಚಕ್ಷಣಾ ತಂಡದ ಅಧಿಕಾರಿ ದಾಖಲಿಸಿದ್ದ ಖಾಸಗಿ ದೂರು ಆಧರಿಸಿ ವಿಚಾರಣಾ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರಡಿ ಸರ್ಕಾರಿ ಅಧಿಕಾರಿಗಳು ಹೊರಡಿಸಿದ ಆದೇಶವನ್ನು ಉಲ್ಲಂಘಿಸಿದ ಅಪರಾಧ ಕಾಗ್ನಿಜೆನ್ಸ್ ತೆಗೆದುಕೊಂಡಿತ್ತು. ಹಾಗೆಯೇ, ಅರ್ಜಿದಾರರಿಗೆ ಸಮನ್ಸ್ ಜಾರಿಗೊಳಿಸಿದೆ. ಆದರೆ, ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 188 ಅನ್ವಯಿಸುವುದಿಲ್ಲ. ಹಾಗಾಗಿ, ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು. ವಾದ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣದ ವಿಚಾರಣೆಗೆ ಅನುಮತಿಸಿದರೆ, ಅದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿತು. ಬಳಿಕ ಯತ್ನಾಳ್ ಅವರ ವಿರುದ್ಧದ ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಿತು.
comments
Log in to write reviews