ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ.ಶಿವಕುಮಾರ್
2024-08-15 07:22:47
ಚನ್ನಪಟ್ಟಣ: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕದನ ಕುತೂಹಲ ಮೂಡಿಸಿದ್ದು, ಚನ್ನಪಟ್ಟಣ ಬೈಎಲೆಕ್ಷನ್ಗೆ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.
ಇಂದು ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.
ಇಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚನ್ನಪಟ್ಟಣದಲ್ಲಿ ನಡೆದ ಧ್ವಜಾರೋಹಣ ವಿಚಾರವಾಗಿ ಮಾತನಾಡಿದ ಡಿ. ಕೆ. ಶಿವಕುಮಾರ್, "ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ. ಅಧಿಕಾರಿಗಳನ್ನು ಕೇಳಿದ್ದೆ, ಅವರು ಬಂದಿಲ್ಲ ಅಂದರು. ನಮ್ಮ ಡ್ಯೂಟಿ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ" ಎಂದರು.
ಪ್ರಸ್ತುತ ಕನಕಪುರ ಕ್ಷೇತ್ರದ ಶಾಸಕರಾಗಿರುವ ಡಿ. ಕೆ. ಶಿವಕುಮಾರ್ ಅವರು 'ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ" ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದು, ಚನ್ನಪಟ್ಟಣದಿಂದ ಕಣಕ್ಕಿಳಿಯಲಿದ್ದಾರೆಯೇ? ಎಂಬ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ.
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಉಪ ಚುನಾವಣೆ ಎದುರಾಗಿದೆ. ಈ ಚುನಾವಣೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಎಚ್ ಡಿ ಕುಮಾರಸ್ವಾಮಿ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.
comments
Log in to write reviews