ಡಿ.ಕೆ.ಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂಕೋರ್ಟಿಗೆ ಯತ್ನಾಳ್ ಮೇಲ್ಮನವಿ!

ಡಿ.ಕೆ.ಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂಕೋರ್ಟಿಗೆ ಯತ್ನಾಳ್ ಮೇಲ್ಮನವಿ!

2024-09-05 02:51:12

ನವದೆಹಲಿ, ಸೆ.5: ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಇದೀಗ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.

ಹೌದು, ಮಾಜಿ ಕೇಂದ್ರ ಸಚಿವ ಹಾಗೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಆದಾಯ ಮೀರಿ ಆಸ್ತಿ ಗಳಿಕೆ ಬಗ್ಗೆ ಡಿ.ಕೆ ಶಿವಕುಮಾರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿಸುವ ಸಂದೇಶ ರವಾನಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಅವರು ಬೆಂಗಳೂರಿನ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29ರಂದು ಹೈಕೋರ್ಟ್ ತಿರಸ್ಕರಿಸಿತ್ತು.

ವಿಚಾರಣೆಯ ಬಳಿಕ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್‌ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಯತ್ನಾಳ್, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಈಗಾಗಲೇ ಕೇವಿಯಟ್ ಸಲ್ಲಿಸಿದ್ದಾರೆ.

ಯತ್ನಾಳ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಾಲಿನ್ಯ ನಿಯಂತ್ರಣ ಮಂಡಳಿ
ಮತ್ತೊಂದೆಡೆ, ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅವಕಾಶ ನೀಡಿರುವುದರ ವಿರುದ್ಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಪಿಸಿಬಿ) ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಕಾರ್ಖಾನೆ ತೆರೆಯಲು ಅನುಮತಿ ನೀಡದಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಕಾರ್ಖಾನೆ ನಿಯಮಗಳ ಉಲ್ಲಂಘಿಸಿದೆ ಎಂದು ಮೇಲ್ಮನವಿ ಅರ್ಜಿಯಲ್ಲಿ ಪಿಸಿಬಿ ಆರೋಪಿಸಿದೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನಲ್ಲಿರುವ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅನುಮತಿ ನೀಡಿತ್ತು. ಆದಾಗ್ಯೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿರಲಿಲ್ಲ. ಇದರ ವಿರುದ್ಧ ಇತ್ತೀಚೆಗಷ್ಟೇ ಯತ್ನಾಳ್ ಪ್ರತಿಭಟನೆಯನ್ನೂ ನಡೆಸಿದ್ದರು. ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಇತರ ನಾಯಕರು ಯತ್ನಾಳ್ ಬೆಂಬಲಕ್ಕೆ ನಿಂತಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈ ವಿಚಾರವಾಗಿ ಯತ್ನಾಳ್ ಜತೆ ಮಾತುಕತೆ ನಡೆಸಿ, ಪ್ರತಿಭಟನೆ ಕೈಬಿಡಲು ಮನವಿ ಮಾಡಿದ್ದರು.
ಆದರೆ ಇದೀಗ ಅಕ್ರಮ ಆಸ್ತಿ ಗಳಿಕೆ ಕುರಿತು ಡಿ.ಕೆ ಶಿವಕುಮಾರ್ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿ ಮತ್ತೆ ಕಾನೂನು ಸಂಘರ್ಷ ನಡೆಸಲು ಯತ್ನಾಳ್ ಮುಂದಾಗಿದ್ದಾರೆ. ಈ ಮೂಲಕ ಮುಡಾ ಸೈಟ್ ಹಗರಣದಲ್ಲಿ ಸಿಲುಕಿ ರಾಜ್ಯಪಾಲರ ಪ್ರಾಸಿಕ್ಯೂಶನ್ ವಿರುದ್ಧ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಕಾನೂನು ಹೋರಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಬದಲಿಗೆ ಪರ್ಯಾಯ ಸಿಎಂ ಆಗಲು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದ ಡಿಸಿಎಂ ಡಿ.ಕೆ‌ ಶಿವಕುಮಾರ್ ಅವರಿಗೆ ಇದರಿಂದ ಭಾರಿ ಹಿನ್ನಡೆಯಾಗಿದೆ.

author single

L Ramprasad

Managing Director

comments

No Reviews