ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5300 ಕೋಟಿ ರೂ. ಬಿಡುಗಡೆಗೊಳಿಸದಿದ್ರೆ ಸುಪ್ರೀಂಕೋರ್ಟ್ ಮೊರೆ: ಕೇಂದ್ರಕ್ಕೆ ರಾಜ್ಯಸರ್ಕಾರ ಪತ್ರ
2024-09-10 07:47:09
ಮಧ್ಯ ಕರ್ನಾಟಕದ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ರಾಜ್ಯದ ಕಾನೂನು,ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಒತ್ತಾಯಿಸಿದ್ದಾರೆ.
ಕೇಂದ್ರಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟ ಎಲ್ಲಾ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟೀಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ ಎಂದು ಸಚಿವ ಎಚ್.ಕೆ ಪಾಟೀಲ್ ವಿವರಿಸಿದರು.
ದಿನಾಂಕ: 01.02.2023 ರಂದು ಕೇಂದ್ರಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದ ಪುಟ ಸಂಖ್ಯೆ (10) ಪ್ಯಾರಾ (39) ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ.
ಕೇಂದ್ರಸರ್ಕಾರದಿಂದ ರಾಷ್ಟ್ರೀಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದ ಮತ್ತು ಎಲ್ಲಾ ಷರತ್ತುಗಳನ್ನು ಪೂರೈಸಿ, ಅನುಮೋದನೆಗೊಂಡಿರುವ ರಾಷ್ಟ್ರೀಯ ಯೋಜನೆಗೆ ರಾಜಕೀಯ ಉದ್ದೇಶದಿಂದ 2023ರ ಸಾರ್ವತ್ರಿಕ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಂಗಡ ಪತ್ರದ ಭಾಷಣದಲ್ಲಿ ತಾನೇ ಘೋಷಿಸಿದ ಘೋಷಣೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಅವರು ಆರೋಪಿಸಿದರು.
ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ದಿನಾಂಕ: 3.08.2024 ರಂದು ಮತ್ತು ದಿನಾಂಕ: 19.06.2024 ರಂದು ಹಾಗೂ ದಿನಾಂಕ: 16.08.2023 ರಂದು ಬರೆದ ಪತ್ರಕ್ಕೆ ಉತ್ತರ ಬರೆದ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ, ನದಿ ಅಭಿವೃದ್ಧಿ ಹಾಗೂ ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಪತ್ರ ಬರೆದು ಅನುದಾನ ಬಿಡುಗಡೆಗೆ ಪತ್ರ ಬರೆದಿದ್ದಾರೆ ಎಂದರು.
ಕೇಂದ್ರಸರ್ಕಾರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲಾ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿರುವ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ ಎಂದರು.
ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ಪಕ್ಷದ್ದೇ ಆಗಿರಲಿ, ಪಕ್ಷಪಾತ ರಹಿತವಾಗಿ ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿಜೆಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ. ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗೆ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಒತ್ತಾಯಿಸಿದರು. ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದ್ರಸರ್ಕಾರದ ಕ್ರಮ ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ರಾಜ್ಯಸರ್ಕಾರ ಗಂಭೀರ ಚಿಂತನೆ ನಡೆಸಿದೆ ಹಾಗೂ ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಲಾಗುವುದು ಎಂದು ಸಚಿವ ಎಚ್.ಕೆ ಪಾಟೀಲ್ ಹೇಳಿದರು.
ಮಹದಾಯಿ ಯೋಜನೆ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ಬಿಜೆಪಿ ಅವಧಿಯಲ್ಲಿಯೇ ಮಹದಾಯಿ ಜಲ ವಿವಾದ ಕುರಿತು ಟ್ರಿಬ್ಯೂನಲ್ ರಚಿಸಲು ಕೋರಿಕೆ ಸಲ್ಲಿಸಲಾಗಿತ್ತು. ಆದರೆ ಟ್ರಿಬ್ಯೂನಲ್ ಅವಶ್ಕತೆ ಇಲ್ಲದಿದ್ದರೂ ಕಾಂಗ್ರೆಸ್‌ನವರು ಟ್ರಿಬ್ಯೂನಲ್ ರಚಿಸಿದರು ಎಂದು ಟೀಕಿಸಿರುವುದು ಅವರ ನಿರ್ಲಕ್ಷ್ಯವನ್ನು ತೋರುತ್ತದೆ. ಕೇಂದ್ರಸರ್ಕಾರದ ವನ್ಯಜೀವಿ ಮಂಡಳಿ ರಾಜ್ಯದ ಪ್ರತಿಷ್ಠಿತ ಈ ಮಹತ್ವದ ಯೋಜನೆಗೆ ಅಡ್ಡಗಾಲು ಹಾಕುವುದನ್ನು ಬಿಟ್ಟು ಮಂಜೂರಾತಿ ನೀಡಬೇಕೆಂದು ಸಚಿವ ಎಚ್.ಕೆ ಪಾಟೀಲ್ ಕೇಂದ್ರಸರ್ಕಾರವನ್ನು ಒತ್ತಾಯಿಸಿದರು.
comments
Log in to write reviews