ವಾಲ್ಮೀಕಿ ನಿಗಮದ ಹಗರಣ: 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್ಐಟಿ!
2024-08-05 08:11:55
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ.
ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ. ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಸುಮಾರು 50 ಕೋಟಿ ರೂ. ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಸೀಜ್ ಮಾಡಿ ನ್ಯಾಯಾಲಯದ ಸುಪರ್ದಿಗೆ ನೀಡಲಾಗಿದೆ. ಪ್ರಕರಣದಲ್ಲಿ ಮೊದಲಿಗೆ ಬಂಧನವಾದ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಎಸ್ಐಟಿ ಚಾರ್ಜ್ ಶೀಟ್ ನಲ್ಲಿ ನಾಗೇಂದ್ರ, ದದ್ದಲ್ ಇಲ್ಲ!
ಹೌದು, ಎಸ್ಐಟಿ ಚಾರ್ಜ್ ಶೀಟ್ ನಲ್ಲಿ ಸದ್ಯ ಅರೆಸ್ಟ್ ಆಗಿರುವ ಪ್ರಕರಣದ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ-ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಹೆಸರುಗಳೇ ಇಲ್ಲ. ಹೀಗಾಗಿ ಎಸ್ಐಟಿ ಚಾರ್ಜ್ ಶೀಟ್ ರಾಜ್ಯದ ಕಾಂಗ್ರೆಸ್ ಸರ್ಕಾರದ ಆದೇಶದ ಮೇರೆಗೆ ಆಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುವ ಸಾಧ್ಯತೆ ಇದೆ.
comments
Log in to write reviews